ವಿಜಯಪುರ: ರಸಗೊಬ್ಬರ ಬೆಲೆ ಏರಿಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹೆಚ್ಚುವರಿ ಆರ್ಥಿಕ ಹೊರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಹಸಿರು ಶಾಲು ಧರಿಸಿದ ನೂರಾರು ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿ, ರಸಗೊಬ್ಬರ ಬೆಲೆ ನಿಯಂತ್ರಣಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರೈತರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರಾಜ್ಯ ಸಂಚಾಲಕ ಸಿದ್ದನಗೌಡ ಜಲಪೂರ ಮಾತನಾಡಿ, ಈಗಾಗಲೇ ಬೆಳೆ ನಷ್ಟ, ಮಳೆ ಸಮಸ್ಯೆ, ಸಾಲದ ಹೊರೆ ಸೇರಿದಂತೆ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿರುವ ರೈತರಿಗೆ ರಸಗೊಬ್ಬರ ದರ ಏರಿಕೆ ಮತ್ತೊಂದು ದೊಡ್ಡ ಹೊರೆ ಆಗಿದೆ ಎಂದು ಕಿಡಿಕಾರಿದರು.
“ರಸಗೊಬ್ಬರಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ರೈತರ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ದರ ನಿಯಂತ್ರಣ ಮಾಡಬೇಕು. ಕಾಳಸಂತೆ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದರು.
ಇದೇ ವೇಳೆ ಕೃಷಿ ಚಟುವಟಿಕೆಗಳಿಗೆ ಬಳಸುವ ವಾಹನಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಪೂರೈಕೆ ಮಾಡಬೇಕು ಹಾಗೂ ರೈತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರು ಹಾಗೂ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.
ವರದಿ: ಲಕ್ಷ್ಮಣ ಮೂಕಿ,8618861316
UK FAST KANNADA NEWS
Very nice sir🙏
ReplyDelete